ಮಕ್ಕಳೇ ದೇಶದ ಭವಿಷ್ಯದ ಆಸ್ತಿಗಳು: ಉಪ ಪ್ರಾಂಶುಪಾಲ ರವಿಚಂದ್ರ

Bangarappa c journalist
Bangarappa c journalist - Journalist
1 Min Read

ಮಕ್ಕಳೇ ದೇಶದ ಭವಿಷ್ಯದ ಆಸ್ತಿಗಳು: ಉಪ ಪ್ರಾಂಶುಪಾಲ ರವಿಚಂದ್ರ

ಪಿರಿಯಾಪಟ್ಟಣ: ಮಕ್ಕಳು ದೇಶದ ಭವಿಷ್ಯದ ಆಸ್ತಿಗಳಾಗಿದ್ದು, ಅವರಲ್ಲಿ ಉತ್ತಮ ಶಿಕ್ಷಣ, ಸಂಸ್ಕಾರ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಿ.ಪಿ.ಬಿ.ಎಸ್. ಸರ್ಕಾರಿ ಬಾಲಕರ ಪ್ರೌಢಶಾಲೆಯ ಉಪ ಪ್ರಾಂಶುಪಾಲ ರವಿಚಂದ್ರ ತಿಳಿಸಿದರು.

ಪಟ್ಟಣದ ಡಿ.ಪಿ.ಬಿ.ಎಸ್. ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಮತ್ತು ಅಭಿಮಾನವಿತ್ತು. ಅವರ ಜನ್ಮದಿನವಾದ ನವೆಂಬರ್ 14 ಅನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳು ತಮ್ಮಲ್ಲಿರುವ ಪ್ರತಿಭೆ, ಸೃಜನಶೀಲತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿರುವ ಪ್ರತಿಭೆ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಹೊರತರಲು ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಕರು ಮತ್ತು ಶಿಕ್ಷಕಿಯರು ವಿವಿಧ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಕ್ಕಳನ್ನು ರಂಜಿಸಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎಸ್‌ಡಿಎಂಸಿ ಅಧ್ಯಕ್ಷ ಕುಮಾರ್, ಸದಸ್ಯರಾದ ವೆಂಕಟೇಶ್ ಹಾಗೂ ಶಿಕ್ಷಕರು ಬಹುಮಾನ ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Share This Article