ಮಂಡ್ಯ ಜಿಲ್ಲಾ ಸಹಕಾರ ಸಮ್ಮೇಳನ: ಮಣ್ಣಿನ ಆರೋಗ್ಯ ಕಾಪಾಡಿ, ಸುಸ್ಥಿರ ಕೃಷಿಗೆ ಆದ್ಯತೆ ನೀಡಿ – ಡಾ. ರಾಮಚೆಂದ್ರ
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಭಾರತೀಯ ಕೃಷಿ ಸಂಶೋಧನಾ ಪರಿಷತ್ (ಭಾ.ಕೃ.ಅ.ಪ.) – ಕೃಷಿ ವಿಜ್ಞಾನ ಕೇಂದ್ರ, ವಿ.ಸಿ. ಫಾರಂ, ಮಂಡ್ಯ ಹಾಗೂ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ) ಇವರ ಸಹಯೋಗದಲ್ಲಿ ಮಂಡ್ಯದ ವಿ.ಸಿ. ಫಾರಂನಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ “ಮಂಡ್ಯ ಜಿಲ್ಲಾ ಸಹಕಾರ ಸಮ್ಮೇಳನ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಣ್ಣಿನ ಆರೋಗ್ಯ ಸಂರಕ್ಷಣೆ, ಸಮತೋಲಿತ ರಸಗೊಬ್ಬರ ಬಳಕೆ ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವದ ಕುರಿತು ರೈತರಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಇಫ್ಕೋ, ಬೆಂಗಳೂರಿನ ರಾಜ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಡಾ. ಸಿ. ನಾರಾಯಣಸ್ವಾಮಿ ಅವರು ಮಾತನಾಡಿ, ಇಫ್ಕೋ ರೈತರ ಒಡೆತನದ ಸಹಕಾರ ಸಂಸ್ಥೆಯಾಗಿದ್ದು, ಹಲವು ದಶಕಗಳಿಂದ ರೈತರ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು. 1967ರಲ್ಲಿ ಆರಂಭವಾದ ಸಂಸ್ಥೆಯು ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಮಂಡ್ಯದಲ್ಲಿ ಇಫ್ಕೋ ಪ್ರಾದೇಶಿಕ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರವಾಗಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ರೈತರಿಗೆ ರಸಗೊಬ್ಬರ, ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಕೃಷಿ ಸಂಬಂಧಿತ ತಾಂತ್ರಿಕ ಮಾಹಿತಿಯನ್ನು ತಲುಪಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ದೇಶದಲ್ಲಿ ರಸಗೊಬ್ಬರಗಳ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಣ್ಣಿನ ಫಲವತ್ತತೆಯನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರಾಸಾಯನಿಕ ರಸಗೊಬ್ಬರಗಳ ಅತಿಯಾದ ಮತ್ತು ಅಸಮತೋಲಿತ ಬಳಕೆಯಿಂದ ಮಣ್ಣಿನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಬಹುದು. ಆದ್ದರಿಂದ ರೈತರಿಗೆ ವೈಜ್ಞಾನಿಕವಾಗಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ದೇಶದಲ್ಲಿ ರಾಸಾಯನಿಕ ರಸಗೊಬ್ಬರಗಳ ಉತ್ಪಾದನೆಗೆ ಅಗತ್ಯವಿರುವ ಕೆಲವು ಕಚ್ಚಾ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಉತ್ಪಾದನಾ ವೆಚ್ಚದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದರು. ರೈತರು ಮಣ್ಣಿನ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಬೆಳೆಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸಬೇಕು. ರಾಸಾಯನಿಕ ಗೊಬ್ಬರಗಳ ಜೊತೆಗೆ ಜೈವಿಕ ಗೊಬ್ಬರಗಳ ಮಹತ್ವವನ್ನೂ ಅರಿತು, ಅವುಗಳ ಸಮರ್ಪಕ ಬಳಕೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಇಫ್ಕೋ, ಮಂಡ್ಯದ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ಬಿ. ಚೇತನ್ ಅವರು ಮಾತನಾಡಿ, ರೈತರು ರಾಸಾಯನಿಕ ಗೊಬ್ಬರಗಳು, ಸಾವಯವ ಗೊಬ್ಬರಗಳು ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆಯ ಕುರಿತು ಸೂಕ್ತ ಮಾಹಿತಿ ಪಡೆದು ಅವುಗಳನ್ನು ವೈಜ್ಞಾನಿಕವಾಗಿ ಬಳಸಬೇಕು ಎಂದು ತಿಳಿಸಿದರು.
ಬೆಳೆಗಳಿಗೆ ಅಗತ್ಯವಿರುವ ಪ್ರಮಾಣಕ್ಕಿಂತ ಹೆಚ್ಚು ರಾಸಾಯನಿಕ ಗೊಬ್ಬರಗಳನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುವ ಸಾಧ್ಯತೆಯಿದೆ. ಹೀಗಾಗಿ ಗೊಬ್ಬರಗಳ ಬಳಕೆಯಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಮತ್ತು ಕೃಷಿ ತಜ್ಞರ ಸಲಹೆಗಳನ್ನು ಪಾಲಿಸುವುದು ಮುಖ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿಸ್ತರಣಾ ನಿರ್ದೇಶಕರಾದ ಡಾ. ಸಿ. ರಾಮಚಂದ್ರ ಅವರು ರೈತರನ್ನು ಉದ್ದೇಶಿಸಿ ಮಾತನಾಡಿ, ಬೆಳೆಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ನಿರ್ಧರಿಸಲು ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ರೈತರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸಿ, ಅದರ ಫಲಿತಾಂಶಗಳ ಆಧಾರದ ಮೇಲೆ ಬೆಳೆಗಳಿಗೆ ಸೂಕ್ತ ಪ್ರಮಾಣದಲ್ಲಿ ಗೊಬ್ಬರಗಳನ್ನು ಬಳಸಬೇಕು. ಅನಗತ್ಯವಾಗಿ ಗೊಬ್ಬರಗಳನ್ನು ಬಳಸುವುದರಿಂದ ಕೃಷಿ ಉತ್ಪಾದನಾ ವೆಚ್ಚ ಹೆಚ್ಚುವುದರ ಜೊತೆಗೆ ಬೆಳೆಗಳ ಇಳುವರಿಯ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂದು ಹೇಳಿದರು.
ಮಣ್ಣಿನ ಆರೋಗ್ಯ ಹದಗೆಟ್ಟರೆ ಭವಿಷ್ಯದ ಕೃಷಿ ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ರೈತರು ಮಣ್ಣಿನ ಗುಣಧರ್ಮ ಮತ್ತು ಪೋಷಕಾಂಶಗಳ ಅಗತ್ಯತೆಯ ಕುರಿತು ವೈಜ್ಞಾನಿಕ ಜ್ಞಾನವನ್ನು ಪಡೆದು, ಸಮತೋಲಿತ ಗೊಬ್ಬರ ಬಳಕೆಯ ಮೂಲಕ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಆರೋಗ್ಯಕರ ಹಾಗೂ ಫಲವತ್ತಾದ ಮಣ್ಣನ್ನು ಉಳಿಸಿ ನೀಡುವುದು ಪ್ರತಿಯೊಬ್ಬ ರೈತನ ಜವಾಬ್ದಾರಿಯಾಗಿದೆ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಮಂಡ್ಯದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಅತೀಫ ಮುನವ್ವರಿ ಅವರು ನೆರವೇರಿಸಿದರು. ಭಾರತವು ಪ್ರಸ್ತುತ ಸುಮಾರು 376 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಉತ್ಪಾದಿಸುತ್ತಿದ್ದರೂ, ಮಣ್ಣಿನ ಆರೋಗ್ಯದ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ತಿಳಿಸಿದರು. ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಸುಸ್ಥಿರ ಕೃಷಿಯ ಮೂಲಭೂತ ಅಗತ್ಯವಾಗಿದ್ದು, ರೈತರು ಮಣ್ಣಿನ ಗುಣಮಟ್ಟದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಣ್ಣಿನ ಆರೋಗ್ಯ ಸಂರಕ್ಷಣೆ, ಸಮತೋಲಿತ ರಸಗೊಬ್ಬರ ಬಳಕೆ, ಸಾವಯವ ಮತ್ತು ಜೈವಿಕ ಗೊಬ್ಬರಗಳ ಮಹತ್ವ, ಮಣ್ಣು ಮತ್ತು ನೀರಿನ ಪರೀಕ್ಷೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಅರಿವು ಮೂಡಿಸಲಾಯಿತು. ರೈತರು ಕೃಷಿ ವಿಜ್ಞಾನಿಗಳ ಸಲಹೆಗಳನ್ನು ಪಡೆದು, ಮಣ್ಣಿನ ಪರೀಕ್ಷೆಯ ಆಧಾರದ ಮೇಲೆ ಪೋಷಕಾಂಶಗಳನ್ನು ನಿರ್ವಹಿಸುವ ಮೂಲಕ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಿ, ಮಣ್ಣಿನ ಫಲವತ್ತತೆಯನ್ನು ದೀರ್ಘಕಾಲ ಕಾಪಾಡಿಕೊಳ್ಳಬಹುದು ಎಂಬ ಸಂದೇಶವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಮುಖ್ಯ ತಾಂತ್ರಿಕ ಅಧಿಕಾರಿ ಡಾ. ಹೆಚ್. ಎಂ. ಮಹೇಶ ಅವರು ವಂದನಾರ್ಪಣೆ ನೆರವೇರಿಸಿದರು. ಕೃಷಿ ವಿಜ್ಞಾನ ಕೇಂದ್ರ, ವಿ.ಸಿ. ಫಾರಂ, ಮಂಡ್ಯದ ಕೃಷಿ ವಿಸ್ತರಣಾ ವಿಜ್ಞಾನಿ ಡಾ. ಡಿ. ಕೆ. ಸುರೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 80ಕ್ಕೂ ಅಧಿಕ ರೈತರು, ರೈತ ಮಹಿಳೆಯರು ಮತ್ತು ಯುವಕರು ಭಾಗವಹಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
